ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಅವಳಿ ಜಿಲ್ಲೆಗಳಲ್ಲಿ ಕನ್ನಡ ಭಾಷಾ ವಿಷಯ ಪರೀಕ್ಷೆಗೆ 22,865 ವಿದ್ಯಾರ್ಥಿಗಳು ಹಾಜರು, 1180 ವಿದ್ಯಾರ್ಥಿಗಳು ಗೈರು

ಬಳ್ಳಾರಿ/ವಿಜಯನಗರ,ಮಾ.9: ಪ್ರಸ್ತಕ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಗುರುವಾರದಿಂದ ಪ್ರಾರಂಭವಾಗಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿವೆ. ಮಾ.9ರಂದು ಗುರುವಾರ ಜರುಗಿದ ಕನ್ನಡ ಭಾಷಾ ವಿಷಯ ಪರೀಕ್ಷೆಯಲ್ಲಿ, ಬಳ್ಳಾರಿ ಜಿಲ್ಲೆಯಲ್ಲಿ 10,864 ವಿದ್ಯಾರ್ಥಿಗಳು ಮತ್ತು ವಿಜಯನಗರ ಜಿಲ್ಲೆಯಲ್ಲಿ 13,181 ವಿದ್ಯಾರ್ಥಿಗಳು ಸೇರಿ ಒಟ್ಟು 24,045 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ 22,865 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ 10,414 ಮತ್ತು ವಿಜಯನಗರ ಜಿಲ್ಲೆಯಲ್ಲಿ 12,451 ವಿದ್ಯಾರ್ಥಿಗಳು ಸೇರಿ ಒಟ್ಟು 22,865 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ 450 ಮತ್ತು ವಿಜಯನಗರ ಜಿಲ್ಲೆಯಲ್ಲಿ 730 ಸೇರಿ ಒಟ್ಟು 1180 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಗೇಂದ್ರ ಅವರು ತಿಳಿಸಿದ್ದಾರೆ.
ಈ ದಿನ ನಡೆದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಗಳು ನಡೆದಿರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
—–