ಬೆಂಗಳೂರು, ಮೇ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು
ಎಂದು ಹೇಳಿದರು.
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿದರು.
ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು.
ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ಸಲಹೆ ನೀಡಿದರು.
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು.
ಶಾಂತಿ ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಸಿದ ಮುಖ್ಯಮಂತ್ರಿಗಳು ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಡಿಜಿಪಿ ಅಲೋಕ್ ಮೋಹನ್, ಎಡಿಜಿಪಿಗಳಾದ ಎಂ. ನಂಜುಂಡಸ್ವಾಮಿ, ಶರತ್ ಚಂದ್ರ, ಅಲೋಕ್ ಕುಮಾರ್ ಸೇರಿದಂತೆ ಗೃಹ ಇಲಾಖೆಯ ಹಿರಿಯ ಅದಿಕಾರಿಗಳು, ಉನ್ನತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
*****