ಬಳ್ಳಾರಿ,ಸೆ.17: ಕಲ್ಯಾಣ ಕರ್ನಾಟಕ ಭಾಗವನ್ನು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಳಿಸಲು, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಶ್ರಮಿಸಿದ ಎಲ್ಲಾ ಮಹನೀಯರನ್ನು ಮರೆಯಬಾರದು. ಅವರ ತ್ಯಾಗ, ಬಲಿದಾನಗಳ ಸ್ಮರಣೆ ಮುಂದಿನ ಪೀಳಿಗೆಗೂ ಅಗತ್ಯ ಇದೆ ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತವು 1947ರ ಆಗಸ್ಟ್ 15 ರಂದು ಸ್ವಾತಂತ್ರ್ಯಗೊಂಡರೂ ಹೈದ್ರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಪ್ರದೇಶಗಳು ಸ್ವಾತಂತ್ರವಾಗಲು ಒಂದು ವರ್ಷ ಕಾಲ ಕಾಯಬೇಕಾಯಿತು. ಆ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಜೃತಿಕ ಕ್ಷೇತ್ರಗಳ ಪ್ರಗತಿ ಶೂನ್ಯದ ಕಡೆಗೆ ಹೆಜ್ಜೆ ಇಡುವಂತಾಗಿತ್ತು. ಈ ಭಾಗದ ಜನರಲ್ಲಿ ಹೋರಾಟಕ್ಕೆ ಧೈರ್ಯ ತುಂಬಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಚಳುವಳಿಯ ಸುಧಾರಕರು ಹಾಗೂ ಮತ್ತಿತರ ಸಂಘ ಸಂಸ್ಥೆಗಳು ಹಾಗೂ ಹೋರಾಟಕ್ಕೆ ಇಳಿದು ಶ್ರಮಿಸಿದ ಎಲ್ಲಾ ಮಹನೀಯರನ್ನು ನಾವು ಇಂದು ಸ್ಮರಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.
371(ಜೆ) ಜಾರಿ: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಹಿತ ದೃಷ್ಟಿಯಿಂದ ಸಂವಿಧಾನ ತಿದ್ದುಪಡಿ ಕಾಯ್ದೆಯಲ್ಲಿ 371(ಜೆ) ಜಾರಿಗೆ ತರಲಾಯಿತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸಾಧ್ಯವಾಗಿದೆ. ಅಂದಿನ ನಮ್ಮ ಸರ್ಕಾರ 2013ರಲ್ಲಿ ನ.06 ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಿದ್ದು, ಇದು ಈ ಭಾಗದ 40 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೂ ಸೇರಿದಂತೆ, ಎಲ್ಲಾ ಭಾಗಗಳ ಮೂಲಭೂತ ಸೌಕರ್ಯ, ಆರೋಗ್ಯ, ಸಾಮಾಜಿಕ, ರಸ್ತೆ ಸಂಪರ್ಕ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಇನ್ನೀತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೆ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಗೆ ಅನುದಾನ ಹಂಚಿಕೆ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ರೂ.342.87 ಕೋಟಿ ಅನುದಾನ ಹಂಚಿಕೆಯಾಗಿದ್ದು, ಒಟ್ಟು 914 ಕಾಮಗಾರಿಗಳನ್ನು ಕೈಗೆತ್ತಿಕೊಂಡು 446 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ ರೂ.160.79 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ. ಬಾಕಿ ಉಳಿದ 468 ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ ಎಂದು ತಿಳಿಸಿದರು.
ಸರ್ಕಾರದ 05 ಮಹತ್ತರ ಯೋಜನೆಗಳಲ್ಲಿ ಸರ್ಕಾರವು 04 ಯೋಜನೆಗಳನ್ನು ಪೂರೈಸಿ ನುಡಿದಂತೆ ನಡೆದುಕೊಂಡಿದೆ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಲ್ಯಾಣ ಕರ್ನಾಟಕ ಭಾಗವಾದ ಬಳ್ಳಾರಿ ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗಾಗಿ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ 371(ಜೆ) ಅಡಿಯಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆದು ಯುವ ಸಮುದಾಯ ಮುನ್ನಡೆಯಬೇಕು ಎಂದು ಕಿವಿ ಮಾತು ಹೇಳಿದರು.
ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ಕಲ್ಯಾಣ ಕರ್ನಾಟಕ ಉತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಸೇರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆ ಮಾಡಲು ‘ಪ್ರತಿಬಿಂಬ’ ಯೋಜನೆ ಜಾರಿತರಲಾಗಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಪ್ರೌಢಶಾಲಾ ಮಕ್ಕಳಿಗೆ ಜಿಪಂನ ಸಿಆರ್‍ಎಸ್ ಅನುದಾನದಲ್ಲಿ 6 ವಿಷಯಗಳ ಅಭ್ಯಾಸ ಪುಸ್ತಕಗಳನ್ನೊಳಗೊಂಡ 14,101 ಪುಸ್ತಕ ಕಿಟ್‍ಗಳನ್ನು ವಿತರಿಸುವ ಉದ್ದೇಶ ಹೊಂದಿದ್ದು, ಜಿಲ್ಲೆಯ ಎಲ್ಲಾ ಶಾಲೆಗಳಿಗೆ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ವಿದ್ಯಾರ್ಥಿಗಳಿಗೆ ಪುಸ್ತಕ ಕಿಟ್ ವಿತರಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ 371(ಜೆ) ಕುರಿತು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಬಿ.ಜಾನಕಿ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ತಹಸೀಲ್ದಾರ್ ಗುರುರಾಜ್, ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
——-