ಕಾರವಾರ.ಡಿ.22:ಜಿಲ್ಲೆಯಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳಿಗೆ ತಾನೇ ಖುದ್ದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪಿ.ಸಿ & ಪಿ.ಎನ್.ಡಿ.ಟಿ ಜಿಲ್ಲಾ ಸಕ್ಷಮ ಪ್ರಾದಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭ್ರೂಣಲಿಂಗ ಪತ್ತೆ ಕಾನೂನು ಬಾಹಿರವಾಗಿದ್ದು, ಇದನ್ನು ಅಕ್ರಮವಾಗಿ ಮಾಡುತ್ತಿರುವವರ ವಿರುದ್ದ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಜಿಲ್ಲೆಯಲ್ಲಿರುವ ಅನಧಿಕೃತ ಮತ್ತು ಕಾನೂನು ಉಲ್ಲಂಘಿಸುವ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಅನಿರೀಕ್ಷಿತ ದಾಳಿಗಳನ್ನು ನಡಸುವಂತೆ ಸೂಚನೆ ನೀಡಿದ ಅವರು, ತಾನೂ ಕೂಡಾ ಖುದ್ದು ಅನಿರೀಕ್ಷಿತ ಪರಿಶೀಲನೆ ನಡೆಸುತ್ತೇನೆ ಎಂದು ಎಚ್ಚರಿಸಿದರು.
ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ, ಈ ಕೇಂದ್ರದಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವುದಿಲ್ಲ ಎಂದು ರೋಗಿಗಳಿಗೆ ಸ್ಪಷ್ಟವಾಗಿ ಕಾಣುವಂತೆ ಫಲಕಗಳನ್ನು ಅಳವಡಿಸಬೇಕು ಹಾಗೂ ಭ್ರೂಣ ಲಿಂಗ ಪತ್ತೆ ಮಾಡುವವರ ವಿರುದ್ದ ಕೈಗೊಳ್ಳುವ ಸೆರೆವಾಸ ಮತ್ತು ದಂಡದ ಶಿಕ್ಷೆಯ ಕುರಿತ ವಿವರಗಳನ್ನು ನಮೂದಿಸಬೇಕು, ಭ್ರೂಣ ಲಿಂಗ ಪತ್ತೆ ಮಾಡುವವರು ಮತ್ತು ಮಾಡಿಸಿಕೊಳ್ಳುವವರು ಇಬ್ಬರಿಗೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಪರೀಕ್ಷೆಗೆ ಬರುವ ರೋಗಿಗಳ ಸಂಪೂರ್ಣ ದಾಖಲಾತಿಯನ್ನು ಇಡುವುದರ ಜೊತೆಗೆ ನಿಯಮಾನುಸಾರ ನಿರ್ವಹಿಸಬೇಕಾದ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ಇಡಬೇಕು, ಪರಿಶೀಲನೆ ಸಂದರ್ಭದಲ್ಲಿ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಬೇಕು, ಬೇರೆ ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿಸಿ, ಇಲ್ಲಿಗೆ ಬಂದು ಭ್ರೂಣ ಹತ್ಯೆ ಮಾಡಿಸಿಕೊಳ್ಳುವವರ ಕುರಿತ ಹಾಗೂ ಗರ್ಭಪಾತವಾದ ಮಹಿಳೆಯರ ಕುರಿತಂತೆ ಅವರಿಗಿದ್ದ ಆರೋಗ್ಯ ಸಮಸ್ಯೆಯ ಮಾಹಿತಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ, ಅಗತ್ಯ ಪರಿಶೀಲನೆ ನಡೆಸಬೇಕು ಎಂದರು.
ಜಿಲ್ಲೆಯಲ್ಲಿ ಯಾವುದೇ ಒಂದೇ ಒಂದು ಭ್ರೂಣ ಹತ್ಯೆ ನಡೆಯಲು ಅವಕಾಶ ನೀಡಬಾರದು, ಭ್ರೂಣ ಹತ್ಯೆ ತಡೆಯುವುದು ಜಿಲ್ಲೆಯ ಎಲ್ಲಾ ಅಧಿಕಾರಿಗಳ ಅತ್ಯಂತ ಪ್ರಮುಖ ಜವಾಬ್ದಾರಿಯಾಗಿದೆ ಎಂದ ಜಿಲ್ಲಾಧಿಕಾರಿಗಳು ಈ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಸಮನ್ವಯ ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಶಿವಾನಂದ ಕುಡ್ತರಕರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕರಿ ಅಧಿಕಾರಿ ಡಾ.ಅನ್ನಪೂರ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಹೆಚ್.ಹೆಚ್. ಕುಕನೂರ ಹಾಗೂ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
—–