ಬಳ್ಳಾರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ: ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ -ಡಿಹೆಚ್‍ಒ ಡಾ.ರಮೇಶ್ ಬಾಬು ಮನವಿ

ಬಳ್ಳಾರಿ,ಜೂ.14: ರಕ್ತವು ಅಮೂಲ್ಯವಾದದ್ದು, ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದರು.                                                        ರಾಜ್ಯ ಏಡ್ಸ್ ಪ್ರಿವೆನ್‍ಷನ್, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಕ್ತ ಸುರಕ್ಷತ ಸಮಿತಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಹಣ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಗರದ ಶ್ರೀಮತಿ ಸರಳದೇವಿ ಸತೀಶ್‍ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.                                ಯಾವುದೇ ಸಮಯದಲ್ಲಿ ಇನ್ನೊಬ್ಬರ ಜೀವವನ್ನು ಉಳಿಸಲು 18 ವರ್ಷದ ಮೇಲ್ಪಟ್ಟ ಎಲ್ಲಾ ಆರೋಗ್ಯವಂತರು ತಪ್ಪದೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು.

ವೇದಿಕೆ ಕಾರ್ಯಕ್ರಮ: ಬಳಿಕ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಹಾಗೂ ಹೆಚ್‍ಐವಿ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನುಷ್ಯ ಆರೋಗ್ಯವಂತನಾಗಿರಲು ಶುದ್ಧ ರಕ್ತದ ಪರಿಚಲನೆ ಮುಖ್ಯವಾಗಿದೆ. ರಕ್ತದಾನ ಮಾಡುವುದರಿಂದ ಶುದ್ಧವಾದ ರಕ್ತ ಉತ್ಪತ್ತಿಯಾಗುತ್ತದೆ. ಹಾಗಾಗಿ ಅರ್ಹರು ತಪ್ಪದೇ ರಕ್ತದಾನ ಮಾಡಿ, ಇತರರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು.
ಗರ್ಭಿಣಿಯರಿಗೆ, ಅಪಘಾತಕ್ಕೆ ಒಳಗಾದವರಗೆ, ರಕ್ತ ಕ್ಯಾನ್ಸರ್‍ನಿಂದ ಬಳಲುತ್ತಿದ್ದವರಿಗೆ ಮತ್ತು ರೋಗಿಗಳಿಗೆ ರಕ್ತವು ಅತ್ಯವಶ್ಯವಾಗಿದ್ದು, ತಮ್ಮ ಅಮೂಲ್ಯವಾದ ರಕ್ತವನ್ನು ನೀಡುವುದರಿಂದ ಇತರರ ಜೀವ ಉಳಿಸಬಹುದು. ರಕ್ತದಾನ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ರಕ್ತದಾನ ಮಾಡುವುದರಿಂದ ರಕ್ತ ಮರು ಉತ್ಪತ್ತಿಯಾಗಿ, ಆರೋಗ್ಯ ಸುಧಾರಿಸಿಕೊಳ್ಳುತ್ತದೆ ಎಂದು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್.ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯ ಡಾ.ಮಂಜುನಾಥ ರೆಡ್ಡಿ ಅವರು ಮಾತನಾಡಿ, ರಕ್ತದಾನವು ಶ್ರೇಷ್ಠದಾನವಾಗಿದ್ದು, ಆರೋಗ್ಯವಂತರಾದ ಪ್ರತಿಯೊಬ್ಬರು ರಕ್ತದಾನ ಮಾಡಬೇಕು ಹಾಗೂ ರಕ್ತದಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿದ್ದ, 108ಬಾರಿ ರಕ್ತದಾನ ಮಾಡಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಬ್ಲಡ್ ದೇವಣ್ಣ ಅವರು ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ರಕ್ತದಾನ ಮಾಡಿದರೆ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ. ಎಲ್ಲರೂ ಭಯ ಪಡದೇ ರಕ್ತದಾನ ಮಾಡಬೇಕು ಎಂದು ತಿಳಿಸಿದರು.
ಸನ್ಮಾನ: ಇದೇ ಸಂದರ್ಭದಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಸುಭಾಷ್ ಸಿಂಗ್ (90 ಬಾರಿ), ರಾಜೇಂದ್ರ ರೆಡ್ಡಿ (60 ಬಾರಿ), ಹೊನ್ನೂರ್ ಸಾಬ್ (58 ಬಾರಿ), ದಾದಾಪೀರ (52 ಬಾರಿ), ಸಂಪತ್ ಕುಮಾರ್ (50 ಬಾರಿ), ರಾಘವೇಂದ್ರ (42 ಬಾರಿ), ಗೋಪಣ್ಣ (38 ಬಾರಿ) ಮತ್ತು ರಾಮು (35 ಬಾರಿ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಾಥಾ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವು ಫಲಕ ಮತ್ತು ಘೋಷಣೆಗಳೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲಿ ಎಸ್.ಎಸ್.ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‍ಕ್ರಾಸ್ ಸಂಯೋಜಕಿ ಡಾ.ಪಲ್ಲವಿ, ಜಿಲ್ಲಾ ಆಶ್ರಿತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್.ಹೆಚ್ ದಾಸಪ್ಪನವರ, ಗಿರೀಶ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಸಿಬ್ಬಂದಿಯವರು, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
—-