ಬಳ್ಳಾರಿ,ಏ.15: ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಮತ್ತಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರು ಹೇಳಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರಿಗೆ ಮತ್ತು ಸಾಹಿತ್ಯ ಪ್ರೇಮಿಗಳಿಗೆ ಹಬ್ಬ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ. ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬಂಧಿಸಿದಂತೆ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ ಎಂದು ಅವರು ತಿಳಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈ ಹಿಂದೆ 1920 ರಲ್ಲಿ ಮೊದಲ ಬಾರಿಗೆ ಅಖಂಡ ಜಿಲ್ಲೆಯ ಹೊಸಪೇಟೆಯಲ್ಲಿ ರೊದ್ದ ಶ್ರೀನಿವಾಸ ರಾವ್ ಅವರ ಅಧ್ಯಕ್ಷತೆಯಲ್ಲಿ 6 ನೇ ಸಮ್ಮೇಳನ ನಡೆಯಿತು. ಎರಡನೇ ಬಾರಿಗೆ ಬಾರಿಗೆ 1926 ರ ಮೇ 22 ರಿಂದ 24 ರ ವರೆಗೆ ಮೂರು ದಿನಗಳ ಕಾಲ 12 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿ ನಗರದಲ್ಲಿ ನಡೆದಿತ್ತು. ಇದರ ಅಧ್ಯಕ್ಷತೆಯನ್ನು ವಚನ ಪಿತಾಮಹ ಫಕೀರಪ್ಪ ಗುರುಬಸಪ್ಪ ಹಳಕಟ್ಡಿ (ಫ.ಗು.ಹಳಕಟ್ಟಿ) ಅವರು ವಹಿಸಿದ್ದರು.
ನಂತರದ 12 ವರ್ಷಗಳ ನಂತರ ಮೂರನೇ ಬಾರಿಗೆ 1938 ರ ಡಿ.29 ರಿಂದ 31 ರ ವರೆಗೆ 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ರಂಗನಾಥ್ ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ನಾಲ್ಕನೇ ಬಾರಿಗೆ ಹರಪನಹಳ್ಳಿಯಲ್ಲಿ 1947 ರಲ್ಲಿ ಸಿ.ಕೆ.ವೆಂಕಟರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ 11 ವರ್ಷಗಳ ನಂತರ 1958 ರ ಜ. 18 ರಿಂದ 20 ರ ವರೆಗೆ ವಿನಾಯಕ್ ಕೃಷ್ಣ ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ 5 ನೇ ಬಾರಿಗೆ ನಡೆಯಿತು. ಈಗ 67 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿದೆ. 2025 ರ ಡಿಸೆಂಬರ್ ಮಾಹೆಯಲ್ಲಿ ಆಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಅವರು ತಿಳಿಸಿದರು.
ಇಂದಿನ ಪೀಳಿಗೆಗೆ ಮತ್ತು ಯುವಸಮುದಾಯಕ್ಕೆ ಕನ್ನಡ ಸಾಹಿತ್ಯ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಬಳ್ಳಾರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು.
ಡಿಸೆಂಬರ್ ತಿಂಗಳಲ್ಲಿ ವಾತಾವರಣ ಮತ್ತು ಹವಮಾನವು ಚೆನ್ನಾಗಿರುವುದರಿಂದ ಆಯೋಜನೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ವಿಶ್ವ-ವಿದ್ಯಾಲಯಗಳ ವಿದ್ಯಾರ್ಥಿಗಳು, ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳು ಸೇರಿದಂತೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡುತ್ತಿರುವ ಪರಿಷತ್ತಿನ ಪದಾಧಿಕಾರಿಗಳು, ವಿದ್ಯಾರ್ಥಿಗಳಿಗೆ ಸಮ್ಮೇಳನ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಸಮ್ಮೇಳನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್ ಥಾಮಸ್ ಮುನ್ರೋ ಅವರ ಕುಟುಂಬಸ್ಥರನ್ನು ವಿಶೇಷ ಆಹ್ವಾನಿತರನ್ನಾಗಿ ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ.ಮಹೇಶ್ ಜೋಶಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಮತ್ತು ಅಚ್ಚು-ಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಇದ್ದರು.
—–