ಬಳ್ಳಾರಿ, ಡಿ.10: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಶುಕ್ರವಾರ ನಡೆದ ಚುನಾವಣೆ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿತು ಮಾತ್ರವಲ್ಲ ಶೇ. 99.81 ರಷ್ಟು ಮತದಾನವಾಗಿದೆ.
ಜಿಲ್ಲೆಯ ಒಟ್ಟು 4663 ಮತದಾರರಲ್ಲಿ
4654 ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
9ಜನ ಮತದಾನಕ್ಕೆ ಗೈರು ಆಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗ್ರಾಮ ಪಂಚಾಯಿತಿ ಸದಸ್ಯರು ಅತ್ಯಂತ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದ ದೃಶ್ಯ ಕರ್ನಾಟಕ ಕಹಳೆ ಡಾಟ್ ಕಾಮ್ ಗೆ ಕಂಡು ಬಂದಿತು.
ಮಧ್ಯಾಹ್ನ 12-30ರ ಸುಮಾರಿಗೆ ಬಳ್ಳಾರಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ತಮ್ಮ ಪಕ್ಷದ ಅಭ್ಯರ್ಥಿ ಕೆ.ಸಿ.ಕೊಂಡಯ್ಯ, ಸಂಸದ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ ಮತ್ತು ಅಲ್ಲಂ ವೀರಭಧ್ರಪ್ಪ ಅವರ ಜತೆ ಜಿಪಂ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.
ಜಿ.ಪಂ.ಕಚೇರಿ ಮತಗಟ್ಟೆಯಲ್ಲಿಯೇ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಹಾಗೂ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಹಾಗೂ ವಿವಿಧ ಜನಪ್ರತಿನಿಧಿಗಳು ಬೆಳಿಗ್ಗೆ ಮತದಾನ ಮಾಡಿದರು.
ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಸ್ಥಾಪಿಸಿದ ಮತಗಟ್ಟೆ ಕೇಂದ್ರದಲ್ಲಿ ಮತದಾನ ಮಾಡಿದರು.
ಜಿಲ್ಲೆಯ ಸಿರಗುಪ್ಪ ತಾಲೂಕಿನ ಉತ್ತನೂರು ಗ್ರಾ.ಪಂ. ಸೇರಿದಂತೆ ಹಲವು ಮತಗಟ್ಟೆಗಳಲ್ಲಿ ಶೇ.100ರಷ್ಟು ಮತದಾನವಾಗಿದೆ. ಸಂಡೂರು ಶಾಸಕ ಈ.ತುಕಾರಾಂ ಅವರು ಸಂಡೂರಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಕಮಲಾಪುರ ಪಟ್ಟಣ ಪಂಚಾಯ್ತಿಯ ಮತಗಟ್ಟೆಗೆ ಚುನಾವಣಾ ವೀಕ್ಷಕರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು
*****