ವಿಮ್ಸ್ ಸುಧಾರಣೆಗೆ 100 ಕೋಟಿ ರೂ. ಅಗತ್ಯ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು

ಬಳ್ಳಾರಿ,ಮಾ.06: ವಿಮ್ಸ್ ನ ಹಳೆ ಕಟ್ಟಡ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸುವುದು ಸೇರಿದಂತೆ ಒಟ್ಟಾರೆ ವಿಮ್ಸ್ ಸುಧಾರಣೆಗೆ 100 ಕೋಟಿ ರೂ.ಗಳ ಅಗತ್ಯವಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.
ಭಾನುವಾರ ವಿಮ್ಸ್ ಆವರಣದಲ್ಲಿ ನೂತನವಾಗಿ 40 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶಸ್ತ್ರಚಿಕಿತ್ಸಾ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸುಧಾರಣೆಗೆ ಸರಕಾರ ಅಥವಾ ಕೆಕೆಡಿಬಿಯ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು.
ನಗರದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಪೂರ್ಣಪ್ರಮಾಣದಲ್ಲಿ ಕಾರ್ಯಾರಂಭ ಮಾಡುವುದಕ್ಕೆ 50 ಕೋಟಿ ರೂ.ಗಳ ಅಗತ್ಯವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅನುದಾನ ತಂದು ಎರಡ್ಮೂರು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದರು.
ವಿಮ್ಸ್ ಆಸ್ಪತ್ರೆಯಲ್ಲಿ ಕಳೆದ 15-20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೆ ಕಾಯಂ ಮಾಡುವ ಕುರಿತ ಬೇಡಿಕೆ ಅನೇಕ ವರ್ಷಗಳಿಂದಿದ್ದು,ಸರಕಾರದ ಮಟ್ಟದಲ್ಲಿ ಚರ್ಚಿಸಿ ಕಾಯಂಗೊಳಿಸುವುದಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಉತ್ತರ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಜಿಲ್ಲೆಗಳಿಂದ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯಲು ನಿತ್ಯ ಸಾವಿರಾರು ಜನರು ಬರುತ್ತಿದ್ದಾರೆ. ಅವರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸುವುದಕ್ಕೆ ಆದ್ಯತೆ ನೀಡಬೇಕು ಮತ್ತು ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ವಿಮ್ಸ್ ನಿರ್ದೇಶಕರಿಗೆ ಹಾಗೂ ಇತರ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್, ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಮಾತನಾಡಿದರು.
ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಸತೀಶ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಎಸ್ಪಿ ಸೈದುಲು ಅಡಾವತ್, ಬುಡಾ ಅಧ್ಯಕ್ಷ ಪಾಲನ್ನ,ಎಪಿಎಂಸಿ ಅಧ್ಯಕ್ಷ ಉಮೇಶ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಡಿಎಚ್‍ಒ ಡಾ.ಜನಾರ್ಧನ್, ಮಹಾನಗರ ಪಾಲಿಕೆ ಸದಸ್ಯರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
*****