ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶ

ನವದೆಹಲಿ, ಡಿ.26: ದೇಶದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.    ತೀವ್ರ ಉಸಿರಾಟ ಸಮಸ್ಯೆಯಿಂದ‌ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರನ್ನು ಗುರುವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗ ದಾಖಲಿಸಿ ಚಿಕಿತ್ಸೆ ನೀಡಲು ಆರಂಭಿಸಲಾಗಿತ್ತು.‌ ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.    ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ ನಿಧನದ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ರಾಜ್ಯಾದ್ಯಂತ ಸಾರ್ವಜನಿಕ‌ ಸರಕಾರಿ‌ಕಚೇರಿಗಳು,  ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಒಂದು ವಾರಗಳ ಕಾಲ‌ ಶೋಕಾಚರಣೆ ಘೋಷಿಸಲಾಗಿದೆ.

ಗಣ್ಯರ ಸಂತಾಪ: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಡಾ.‌ಮಲ್ಲಿಕಾರ್ಜುನ‌ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ,  ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ.‌ಪರಮೇಶ್ವರ್, ಸಮಾಜಕಲ್ಯಾಣ ಸಚಿವ ಡಾ. ಎಚ್. ಸಿ ಮಹೇದೇವಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾನೂನು ಸಚಿವ ಎಚ್.ಕೆ ಪಾಟೀಲ್ ಮತ್ತಿತರ ಗಣ್ಯರು ಕಂಬನಿ‌ ಮಿಡಿದಿದ್ದಾರೆ.