ದಾವಣಗೆರೆ: ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಮ್. ಸಿದ್ದೇಶ್ವರ ಅವರು ಜಂಟಿಯಾಗಿ ಸೋಮವಾರ ನೆರವೇರಿಸಿದರು.
ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್. ಎ.ರವೀಂದ್ರನಾಥ ವಹಿಸಿದ್ದರು.
ಮಾಯಕೊಂಡ ಶಾಸಕ ಎನ್. ಲಿಂಗಣ್ಣ, ನವಲಗುಂದ ಶಾಸಕ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಶಂಕರ್ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.