ಬಳ್ಳಾರಿ,ಮೇ29: ಸಾರ್ವಜನಿಕರ ಹಿತದೃಷ್ಠಿಯಿಂದ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾಗಿರುವ ಸಂಪೂರ್ಣ ಲಾಕ್‍ಡೌನ್ ಆದೇಶವನ್ನು ಮೇ 31ರ ಬೆಳಗ್ಗೆ 6ರಿಂದ ಜೂ.7ರ ಬೆಳಗ್ಗೆ 6ರವರೆಗೆ ಲಾಕ್‍ಡೌನ್ ಮುಂದುವರೆಸಲು ಬಳ್ಳಾರಿ ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾರೆ.
ಮೇ 31 ಮತ್ತು ಜೂ.1 ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ.
ಈಗಾಗಲೇ ಮೇ 22ರಂದು ಉಭಯ ಜಿಲ್ಲೆಗಳಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕೆಲವು ಚಟುವಟಿಕೆಗಳಿಗೆ ನಿಷೇಧ ವಿಧಿಸಲಾಗಿತ್ತು;ಅವುಗಳಿಗೆ ಜೂ.7ರವರೆಗೆ ನಿಷೇಧ ಮುಂದುವರಿಯಲಿದೆ ಎಂದು ಜಿಲ್ಲಾದಂಡಾಧಿಕಾರಿ ಮಾಲಪಾಟಿ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
*****