ವಿಜಯನಗರ(ಹೊಸಪೇಟೆ)ಅ.20: ವಿಜಯನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬುಧವಾರ ನಗರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ಸಿಂಗ್ ಅವರು ಜ್ಯೋತಿ ಬೆಳಗಿಸಿ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವಕ್ಕೆ ಚಾಲನೆ ನೀಡಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ವಂದೇ ವಾಲ್ಮೀಕಿ ಕೋಕಿಲಂ ಎಂಬ ಧ್ವನಿ ಸುರುಳಿ ಬಿಡುಗಡೆ ಮಾಡಿಮಾತನಾಡಿದ ಸಚಿವ ಆನಂದಸಿಂಗ್ ಅವರು ವಿಜಯನಗರ ಜಿಲ್ಲೆಯಾದ ನಂತರ ಜಿಲ್ಲಾಡಳಿತದಿಂದ ಮಾಡಲಾದ ಪ್ರಥಮ ಕಾರ್ಯಕ್ರಮ ಇದಾಗಿದೆ. ವಿಜಯನಗರ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯ ದೊಡ್ಡ ಸಮುದಾಯವಾಗಿದ್ದರೂ, ಹಿಂದುಳಿದಿದೆ. ಸರ್ಕಾರದಿಂದ ಈ ಸಮುದಾಯಕ್ಕೆ ಸಲ್ಲಬೇಕಾದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಿಜಯನಗರ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣ ಕಾರ್ಯ ನೇರವೇರಿಸಲಾಗುವುದು. ಜಿಲ್ಲೆಯಲ್ಲಿರುವ ಕೆಲ ಗರಡಿ ಮನೆಗಳ ಅಭಿವೃದ್ದಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಎಸ್ಟಿ ಮೀಸಲಾತಿಯನ್ನು ಶೇ. 7.5 ಹೆಚ್ಚಳದ ಮನವಿ ಪತ್ರವನ್ನು ಸಮಾಜದ ಮುಖಂಡರು ಸಚಿವರಿಗೆ ಸಲ್ಲಿಸಿದರು. ಮನವಿ ಸ್ವೀಕರಿಸಿದ ನಂತರ ಸಚಿವರು ಈ ಪ್ರಸ್ತಾವನೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು..
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಸಹಾಯಕ ಆಯುಕ್ತ ಸಿದ್ದರಾಮೇಶ್ವರ್, ತಹಶೀಲ್ದಾರ್ ಹೆಚ್.ವಿಶ್ವನಾಥ್, ನಗರಸಭೆಯ ಪೌರಾಯುಕ್ತ ಮನ್ಸೂರ್ ಅಲಿ, ಹುಡಾ ಅಧ್ಯಕ್ಷ ಅಶೋಕ ಜೀರೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
*****